ಬೆಂಗಳೂರು : ಯಾವುದೇ ಕಾರಣಕ್ಕೂ ಶಿವಮೊಗ್ಗದ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಇಡಬೇಡಿ ಎಂದು ಮಾಜಿ ಸಿಎಂ ಬಿ.ಎಸ್ . ಯಡಿಯೂರಪ್ಪ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದಿದ್ದಾರೆ .
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಬರೆದ ಪತ್ರದಲ್ಲೇನಿದೆ..
" ಶಿವಮೊಗ್ಗ ಜಿಲ್ಲೆಯ ಬಹುದಿನದ ಕನಸಾದ ವಿಮಾನ ನಿಲ್ದಾಣ ನನಸಾಗುತ್ತಿದೆ . ಸೋಗಾನೆಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣದ ಕಾಮಗಾರಿಯನ್ನು ಇತ್ತೀಚೆಗೆ ತಾವು ವೀಕ್ಷಣೆ ಮಾಡಿದ್ದೀರಿ . ಅಲ್ಲದೇ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಅಗತ್ಯವಾದ ಅನುದಾನ ತ್ವರಿತವಾಗಿ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದ ನಿಮಗೆ ಧನ್ಯವಾದಗಳು ಎಂದಿದ್ದಾರೆ . ಶಿವಮೊಗ್ಗದ ಈ ಹೊಸ ವಿಮಾನ ನಿಲ್ದಾಣಕ್ಕೆ ನನ್ನ ಹೆಸರನ್ನಿಡುವುದಾಗಿ ತಾವು ಘೋಷಿಸಿರುತ್ತೀರಿ . ತಮ್ಮ ಈ ವಿಶೇಷವಾದ ಪ್ರೀತಿ , ಅಭಿಮಾನಕ್ಕೆ ಧನ್ಯವಾದಗಳು . ಇದಕ್ಕಾಗಿ ಜಿಲ್ಲೆಯ ಎಲ್ಲ ಶಾಸಕರು , ವಿಧಾನ ಪರಿಷತ್ ಸದಸ್ಯರು , ಸಂಘ ಸಂಸ್ಥೆಗಳು ಹಾಗೂ ಎಲ್ಲ ಮುಖಂಡರುಗಳಿಗೆ ನನ್ನ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ .
ರಾಷ್ಟ್ರದ ಅಭಿವೃದ್ಧಿಗೆ ಸೇವೆ ಸಲ್ಲಿಸಿದ ಅನೇಕ ಮಹನೀಯರು ಹಾಗೂ ದೇಶಭಕ್ತರಿದ್ದಾರೆ . ಅವರು ನೀಡಿರುವ ಕೊಡುಗೆಗೆ ಹೋಲಿಸಿದಾಗ ನನ್ನದೊಂದು ಅಳಿಲು ಸೇವೆ ಮಾತ್ರ ಹಾಗೂ ನನ್ನನ್ನು ಸತತವಾಗಿ ಬೆಂಬಲಿಸಿ ಸಲುಹಿದ ಜಿಲ್ಲೆಯ ಜನತೆಗೆ ಸೇವೆ ಮಾಡಿದ್ದೇನೆಂಬ ಧನ್ಯತಾಭಾವ ನನ್ನದು . ಈ ಹಿನ್ನೆಲೆಯಲ್ಲಿ ನೂತನೆ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಸೂಕ್ತವಲ್ಲವೆಂದು ಭಾವಿಸುತ್ತೇನೆ . ಆದುದರಿಂದ , ತಮ್ಮ ಈ ನಿರ್ಧಾರವನ್ನು ಪುನರ್ ಪರಿಶೀಲಿಸಿ , ಸೂಕ್ತ ವೇದಿಕೆಯಲ್ಲಿ ಚರ್ಚಿಸಿ . ರಾಷ್ಟ್ರದ , ನಾಡಿನ ಅಭಿವೃದ್ಧಿಗೆ ಹಾಗೂ ಇತಿಹಾಸಕ್ಕೆ ಕೊಡುಗೆ ನೀಡಿದಂತಹ ಮಹನೀಯರ ಹೆಸರನ್ನು ಈ ಹೊಸ ವಿಮಾನ ನಿಲ್ದಾಣಕ್ಕೆ ನಾಮಕರಣ ಮಾಡಬೇಕೆಂದು ಕೋರುತ್ತೇನೆ ಎಂದು ಬರೆದಿದ್ದಾರೆ ."
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ