ಉಡುಪಿ:- ಜೂನ್ 16 ಮತ್ತು 17 ರಂದು ನಡೆಯುವ 2022 ನೇ ಸಾಲಿನ ಇಂಜಿನಿಯರಿAಗ್, ಕೃಷಿ ವಿಜ್ಞಾನ ಮುಂತಾದ ವೃತ್ತಿಪರ ಕೋರ್ಸ್ಗಳ ಪ್ರವೇಶಾತಿಗೆ ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಯಾವುದೇ ಅಕ್ರಮಗಳು ನಡೆಯದಂತೆ, ನ್ಯಾಯೋಚಿತವಾಗಿ ಮತ್ತು ಸುಗಮವಾಗಿ ಯಾವುದೇ ಲೋಪದೋಷಗಳಿಲ್ಲದೇ ನಡೆಸಲು ಸರ್ಕಾರ ಸೂಚಿಸಿರುವ ಎಲ್ಲಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು.
ಅವರು ಇಂದು ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್ ಸಭಾಂಗಣದಲ್ಲಿ, 2022 ನೇ ಸಾಲಿನ ಸಿಇಟಿ ಪರೀಕ್ಷೆ ನಡೆಸುವ ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ನಡೆದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಉಡುಪಿ ಜಿಲ್ಲೆಯಲ್ಲಿ 4704 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗಳಿಗೆ ಹಾಜರಾಗಲಿದ್ದು, ಇದಕ್ಕಾಗಿ ಜಿಲ್ಲೆಯಲ್ಲಿ 8 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗುವುದು. ಸೂಕ್ತ ಪೊಲೀಸ್ ಭದ್ರತೆಯಲ್ಲಿ ಪ್ರಶ್ನೆಪತ್ರಿಕೆಗಳನ್ನು ಖಜಾನೆಯಿಂದ ತೆಗೆದುಕೊಂಡು ಹೋಗಿ ಪರೀಕ್ಷಾ ಕೇಂದ್ರಗಳಿಗೆ ವಿತರಿಸಲು, ತಾಲೂಕಿನ ತಹಶೀಲ್ದಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಪ್ರಾಂಶುಪಾಲರನ್ನು ಒಳಗೊಂಡ 3 ಸದಸ್ಯರ 4 ನಾಲ್ಕು ತಂಡಗಳನ್ನು ರಚಿಸಲಾಗಿದ್ದು, ಪ್ರತೀ ಪರೀಕ್ಷಾ ಕೇಂದ್ರಕ್ಕೆ ಸಹಾಯಕ ಆಯುಕ್ತರ ಶ್ರೇಣಿಗೆ ಕಡಿಮೆಯಿಲ್ಲದ ಒಬ್ಬರು ಅಧಿಕಾರಿಯನ್ನು ವೀಕ್ಷಕರನ್ನಾಗಿ ನೇಮಿಸಲಾಗುವುದು ಎಂದರು.
ಪ್ರಶ್ನೆಪತ್ರಿಕೆಗಳನ್ನು ಇಡುವ ಜಿಲ್ಲಾ ಖಜಾನೆಯಲ್ಲಿ ಸಿಸಿಟಿವಿ ಕ್ಯಾಮೆರಾ, ಬಯೋ ಮೆಟ್ರಿಕ್ ಮೆಷಿನ್ ಮತ್ತು ಬಾರ್ ಕೋಡಿಂಗ್ ವ್ಯವಸ್ಥೆಯನ್ನು ಅಳವಡಿಸುವಂತೆ ಜಿಲ್ಲಾ ಖಜಾನಾಧಿಕಾರಿಗಳಿಗೆ ಮತ್ತು ಎಲ್ಲಾ ಪರೀಕ್ಷಾ ಕೆಂದ್ರಗಳಿಗೆ ಸೂಕ್ತ ಪೊಲೀಸ್ ಸಿಬ್ಬಂದಿ ನಿಯೋಜಿಸುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ ಜಿಲ್ಲಾಧಿಕಾರಿಗಳು, ಪರೀಕ್ಷಾ ಕೇಂದ್ರದ ಕರ್ತವ್ಯಕ್ಕೆ ನಿಯೋಜಿಸುವ ಮುಖ್ಯ ಅಧೀಕ್ಷಕರು ಬೇಸಿಕ್ ಮೊಬೈಲ್ ಮಾತ್ರ ಬಳಸುವಂತೆ ಮತ್ತು ಉಳಿದ ಸಿಬ್ಬಂದಿಗಳು ಕಡ್ಡಾಯವಾಗಿ ಯಾವುದೇ ಮೊಬೈಲ್ ಬಳಕೆ ಮಾಡದಂತೆ ಎಚ್ಚರಿಕೆ ನೀಡಿದರು.
ಜಿಲ್ಲೆಯಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆಗಳು ದೋಷ ರಹಿತವಾಗಿ, ಸುವ್ಯವಸ್ಥಿತವಾಗಿ ಮತ್ತು ಸುಗಮವಾಗಿ ನಡೆಯಲು, ಕರ್ತವ್ಯಕ್ಕೆ ನಿಯೋಜಿಸಿರುವ ಎಲ್ಲಾ ಅಧಿಕಾರಿಗಳು ಅತ್ಯಂತ ಜವಾಬ್ದಾರಿಯುತವಾಗಿ ತಮ್ಮ ಕರ್ತವ್ಯ ನಿರ್ವಹಿಸಬೇಕು ಎಂದರು.
ಪರೀಕ್ಷೆಗಳು ಸುಸೂತ್ರವಾಗಿ ಮತ್ತು ಯಾವುದೇ ದೋಷಗಳಿಲ್ಲದೇ ನಡೆಯಲು ಅನುಕೂಲವಾಗುವಂತೆ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸುವುದಾಗಿ ತಿಳಿಸಿದ ಜಿಲ್ಲಾಧಿಕಾರಿಗಳು, ಪರೀಕ್ಷಾ ಕೇಂದ್ರದ ಸಮೀಪದ ಎಲ್ಲಾ ಝೆರಾಕ್ಸ್ ಅಂಗಡಿಗಳನ್ನು ಕಡ್ಡಾಯವಾಗಿ ಮುಚ್ಚುವಂತೆ ಕ್ರಮ ಕೈಗೊಳ್ಳಲು ಸೂಚಿಸಿದರು.
ಸಾಮಾನ್ಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳ ಸೋರಿಕೆ ಕುರಿತು ಗೊಂದಲ ಮೂಡಿಸುವ, ನಕಲಿ ಪ್ರಶ್ನೆಪತ್ರಿಕೆ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕುವ, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಅಕ್ರಮಗಳಿಗೆ ಉತ್ತೇಜನ ನೀಡುವ ವ್ಯಕ್ತಿಗಳ ವಿರುದ್ಧ ಕಠಿಣ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪರೀಕ್ಷಾ ಕೇಂದ್ರದ ಕೊಠಡಿಗಳನ್ನು ಸೂಕ್ತ ರೀತಿಯಲ್ಲಿ ಸ್ಯಾನಿಟೈಸ್ ಮಾಡುವಂತೆ ಮತ್ತು ಥರ್ಮಲ್ ಸ್ಕಾö್ಯನರ್ನೊಂದಿಗೆ ಅಗತ್ಯ ಸಿಬ್ಬಂದಿಯನ್ನು ನಿಯೋಜಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್., ಅಪರ ಜಿಲ್ಲಾಧಿಕಾರಿ ವೀಣಾ, ಪಿ.ಯು ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಾರುತಿ, ಜಿಲ್ಲೆಯ ಎಲ್ಲಾ ತಹಶೀಲ್ದಾರ್ ಗಳು ಹಾಗೂ ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿರುವ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ