ನವದೆಹಲಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದಲ್ಲಿ ಅತ್ಯುತ್ತಮವಾಗಿ ಆಡಳಿತ ನೀಡುತ್ತಿದ್ದು ಅವರನ್ನು ಯಾವುದೇ ಕಾರಣಕ್ಕೂ ಸಿಎಂ ಸ್ಥಾನದಿಂದ ಅವರನ್ನು ಬದಲಾಯಿಸುವ ಉದ್ದೇಶ ಇಲ್ಲ ಎಂದು ಹೇಳುವ ಮೂಲಕ ಸಿಎಂ ಬದಲಾವಣೆ ವಿಚಾರದ ಚರ್ಚೆಗೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಇತಿಶ್ರೀ ಹಾಡಿದ್ದಾರೆ.
ಮುಖ್ಯಮಂತ್ರಿ ಬದಲಾವಣೆ ವಿಚಾರ ಕಾಂಗ್ರೆಸ್ ಪಕ್ಷದ ಪಿತ್ತೂರಿ ಹಾಗೂ ಷಡ್ಯಂತ್ರ. ಮುಂದಿನ ವಿಧಾನಸಭೆ ಚುನಾವಣೆಯನ್ನು ನಾವು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದಲ್ಲಿ ಎದುರಿಸಿ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ಅವರು ಇಂದು
ನವದೆಹಲಿಯಲ್ಲಿ ಸುದ್ದಿಗಾರರರಿಗೆ ಈ ವಿಷಯ ಸ್ಪಷ್ಟಪಡಿಸಿದರು. ಇದರೊಂದಿಗೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಊಹಾಪೋಹಕ್ಕೆ ತೆರೆ ಎಳೆದರು.
ಸಿಎಂ ಬಸವರಾಜ ಬೊಮ್ಮಾಯಿ ಅತ್ಯುತ್ತಮ ಕೆಲಸ ಮಾಡುತ್ತಿದ್ದಾರೆ. ರೈತರ ಪರವಾಗಿ, ಯುವಕರ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಕಾಮನ್ ಮ್ಯಾನ್ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರನ್ನು ಬದಲಿಸುವ ಪ್ರಶ್ನೆ ಇಲ್ಲ ಎಂದು ಅರುಣ್ ಸಿಂಗ್ ಹೇಳಿದರು
ಮುಂದಿನ ಚುನಾವಣೆ ಶೇ 100 ರಷ್ಟು ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲೇ ಎದುರಿಸಲಿದ್ದೇವೆ ಹಾಗೂ ಪೂರ್ಣ ಪ್ರಮಾಣದಲ್ಲಿ ಬಹುಮತದಲ್ಲಿ ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಾಂಗ್ರೆಸ್ ಗೊಂದಲ ಹುಟ್ಟು ಹಾಕುತ್ತಿದೆ. ಸಿಎಂ ಬದಲಾವಣೆ ಎನ್ನುವುದು ಕಾಂಗ್ರೆಸ್ ಪಕ್ಷದ ಷಡ್ಯಂತ್ರ. ಸಿದ್ದರಾಮಯ್ಯ ಮತ್ತು ಡಿಕೆಶಿ ನಡುವೆಯೇ ಒಡಕಿದೆ. ಅದನ್ನು ಮುಚ್ಚಿ ಹಾಕಲು ಸಿಎಂ ಬದಲಾವಣೆ ವಿಚಾರ ಹುಟ್ಟು ಹಾಕಿದ್ದಾರೆ. ಕಾಂಗ್ರೆಸ್ ನಾಯಕರೇ ಇಲ್ಲದ ಪಕ್ಷ. ಅವರು ಹುಟ್ಟುಹಾಕಿದ ಸಿಎಂ ಬದಲಾವಣೆ ವಿಚಾರದಲ್ಲಿ ಯಾವುದೇ ಸತ್ಯ ಇಲ್ಲ ಎಂದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ