Slider


ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮ; ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

Udupi

 


ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಫೇಕ್​ನ್ಯೂಸ್ ಹಾವಳಿ ಮಿತಿ ಮೀರಿದೆ. ಇದಕ್ಕೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ಸುಳ್ಳು ಸುದ್ದಿ ಹಬ್ಬಿಸುತ್ತಿರುವವರನ್ನು ಗುರುತಿಸಿ, ಕಾನೂನು ಕ್ರಮಕ್ಕೆ ಒಳಪಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಈ ವಿಚಾರವಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಜತೆಗೂ ವಿವರವಾಗಿ ಚರ್ಚಿಸಿದ್ದಾರೆ.

2013ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆ ಫೇಕ್​ನ್ಯೂಸ್‌ಗಳ ಹಾವಳಿ ಹೆಚ್ಚಾಗಿತ್ತು. ಈ ಬಾರಿ ಕೂಡ ಅದೇ ತಂತ್ರವನ್ನು ರಾಜಕೀಯ ವಿರೋಧಿಗಳು ಅನುಸರಿಸುತ್ತಿದ್ದಾರೆ. ಲೋಕಸಭಾ ಚುನಾವಣೆ ಹತ್ತಿರ ಬರುತ್ತಿರುವುದರಿಂದ ಸುಳ್ಳು ಸುದ್ದಿಗಳನ್ನು ಹೆಚ್ಚೆಚ್ಚು ಸೃಷ್ಟಿಸಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸುವ ಸಾಧ್ಯತೆಗಳು ಹೆಚ್ಚಾಗಿವೆ. ಹೀಗಾಗಿ ಆರಂಭದಲ್ಲೇ ಸುಳ್ಳು ಸುದ್ದಿಗಳ ಮೂಲ ಪತ್ತೆ ಹಚ್ಚಿ, ಅವುಗಳನ್ನು ಬೇರು ಸಮೇತ ಕತ್ತರಿಸುವ ಬಗ್ಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದು ಅಧಿಕಾರಿಗಳಿಗೆ ಸಿಎಂ ಸೂಚಿಸಿದ್ದಾರೆ.

ಮಕ್ಕಳ ಕಳ್ಳರು, ಗೋಮಾಂಸ ಸಾಗಿಸುವವರು…ಇತ್ಯಾದಿ ಸುಳ್ಳು ಸುದ್ದಿಗಳನ್ನು ಹರಡಿಸಿ ಕಳೆದ ಬಾರಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಪ್ರಯತ್ನ ಮಾಡಿದ್ದರು. ಈ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಬಿಜೆಪಿ ಮತ್ತು ಸಂಘ ಪರಿವಾರವನ್ನು ಸ್ಪಷ್ಟವಾಗಿ ಮತ್ತು ಅಷ್ಟೇ ನಿಷ್ಠುರವಾಗಿ ತಿರಸ್ಕರಿಸಿದ್ದಾರೆ. ಆದರೆ ದೇಶದ ಪ್ರಜಾಪ್ರಭುತ್ವದ ಉಳಿವಿಗೆ ಅತ್ಯಂತ ಮಹತ್ವದ್ದಾಗಿರುವ 2024ರ ಲೋಕಸಭಾ ಚುನಾವಣೆಗೆ ನಾವು ಸಜ್ಜಗುತ್ತಿರುವ ಹೊತ್ತಿನಲ್ಲಿ ಸುಳ್ಳು ಸುದ್ದಿ, ವದಂತಿಗಳ ಮೂಲಕ ಗುಂಪು ಹಲ್ಲೆ, ಗಲಭೆಗಳನ್ನು ಸೃಷ್ಟಿಸುವ ಪ್ರಯತ್ನಗಳು ನಡೆಯಬಹುದು ಎನ್ನುವ ಸೂಚನೆಗಳೂ ಕಾಣಿಸುತ್ತಿವೆ. ಹೀಗಾಗಿ ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.

ಕಮಿಷನರೇಟ್/ ಪ್ರಧಾನ ಕಚೇರಿಯಲ್ಲಿ ಫ್ಯಾಕ್ಟ್​ಚೆಕ್

ಈ ಹಿಂದೆ ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್ ಮತ್ತು ಪೊಲೀಸ್ ಪ್ರಧಾನ ಕಚೇರಿಯಲ್ಲೇ ಒಂದು ತಾಂತ್ರಿಕ ತಂಡ ಫೇಕ್ ನ್ಯೂಸ್‌ಗಳನ್ನು ಪತ್ತೆ ಹಚ್ಚಿ, ಫ್ಯಾಕ್ಟ್​​ಚೆಕ್ ಮಾಡಿ ಜನರನ್ನು ಎಚ್ಚರಿಸುವ, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕೆಲಸ ನಡೆಯುತ್ತಿತ್ತು. ಆದರೆ, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಫ್ಯಾಕ್ಟ್​ಚೆಕ್ ಮಾಡುವುದನ್ನು ಬಂದ್ ಮಾಡಿಸಿದೆ. ಇದನ್ನು ಮತ್ತೆ ಆರಂಭಿಸಬೇಕು. ಸೈಬರ್ ಪೊಲೀಸರು ಫೇಕ್ ನ್ಯೂಸ್‌ಗಳ ಮೂಲಗಳನ್ನು ಪತ್ತೆಹಚ್ಚಲು ಸರ್ವಸನ್ನದ್ದವಾಗಿ ಕೆಲಸ ಮಾಡಬೇಕು. ಪ್ರತೀ ತಿಂಗಳು ಈ ಬಗ್ಗೆ ವರದಿಯನ್ನು ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.





0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo