Slider

ರಾಜ್ಯದಲ್ಲಿ ಸಿಬಿಐ ತನಿಖೆಗಿದ್ದ ಮುಕ್ತ ಅವಕಾಶ ರದ್ದುಪಡಿಸಿದ ಸಿದ್ದರಾಮಯ್ಯ ಸರ್ಕಾರ

Udupinews

 





ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಸಿಬಿಐ ತನಿಖೆಗೆ ರಾಜ್ಯದಲ್ಲಿ ನೀಡಲಾಗಿದ್ದ ಮುಕ್ತ ಮತ್ತು ಸಾಮಾನ್ಯ ಅವಕಾಶವನ್ನು ಹಿಂಪಡೆದಿದೆ. ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

ಮುಡಾ ಹಗರಣ ಕುರಿತು ತನಿಖೆಗೆ ರಾಜ್ಯ ಹೈಕೋರ್ಟ್ ಆದೇಶ ನೀಡಿದ ಮರುದಿನವೇ ಈ ನಿರ್ಧಾರ ತೆಗೆದುಕೊಂಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಕರಣಕ್ಕೂ ಈ ನಿರ್ಧಾರಕ್ಕೂ ಯಾವುದೇ ಸಂಬಂಧ ಇಲ್ಲ ಎಂದೂ ಸರ್ಕಾರ ಸ್ಪಷ್ಟಪಡಿಸಿದೆ. ಸಿಬಿಐ ತಪ್ಪು ಹಾದಿಯಲ್ಲಿ ನಡೆಯಬಾರದು ಎಂಬ ಏಕೈಕ ಉದ್ದೇಶದಿಂದ ಇಂತಹ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದೆ. ದೆಹಲಿ ಸ್ಪೆಷಲ್ ಪೊಲೀಸ್ ಎಸ್ಟಾಬ್ಲಿಷ್ಮೆಂಟ್ ಕಾಯಿದೆ-1946 ಸೆಕ್ಷನ್ 6 ಪ್ರಕಾರ ಸಿಬಿಐ ತನಿಖೆ ನಡೆಸಲು ಸಂಬಂಧಪಟ್ಟ ರಾಜ್ಯ ಸರ್ಕಾರಗಳ ಅನುಮತಿ ಪಡೆಯಬೇಕಾಗುತ್ತದೆ.

ರಾಜ್ಯ ಸರ್ಕಾರ ವರ್ಗಾಯಿಸಿದ ಅನೇಕ ಪ್ರಕರಣಗಳಲ್ಲಿ ಸಿಬಿಐ ಚಾರ್ಜ್ ಶೀಟ್ ಹಾಕಿಲ್ಲ. ಅನೇಕ ಪ್ರಕರಣಗಳು ಬಾಕಿ ಉಳಿದುಕೊಂಡಿವೆ. ರಾಜ್ಯ ಸರ್ಕಾರ ಶಿಫಾರಸ್ಸು ಮಾಡಿದ ಅನೇಕ ಪ್ರಕರಣಗಳನ್ನು ಕುರಿತು ತನಿಖೆ ನಡೆಸಲು ನಿರಾಕರಿಸಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ಕೆ ಪಾಟೀಲ್ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ. ಅನೇಕ ಪ್ರಕರಣಗಳಲ್ಲಿ ಸಿಬಿಐ ಏಕಪಕ್ಷೀಯವಾಗಿ ನಡೆದುಕೊಂಡಿದೆ. ಹಾಗಾಗಿ ರಾಜ್ಯ ಸರ್ಕಾರ ಈ ನಿರ್ಧಾರವನ್ನು ಕೈಗೊಂಡಿದೆ ಎಂದು ಅವರು ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಸಿಬಿಐ ಸಂಸ್ಥೆಯನ್ನು ರಾಜಕೀಯ ಉದ್ದೇಶಗಳಿಗಾಗಿ ಬಳಕೆ ಮಾಡಿಕೊಳ್ಳುತ್ತಿರುವುದು ಕಂಡು ಬಂದಿದೆ. ಆದ್ದರಿಂದ ರಾಜ್ಯದಲ್ಲಿ ಇನ್ನು ಮುಂದೆ ಯಾವುದೇ ಪ್ರಕರಣ ಕುರಿತು ಸಿಬಿಐ ಮೂಲಕ ತನಿಖೆ ನಡೆಯಬೇಕಾದರೆ ರಾಜ್ಯ ಸರ್ಕಾರದ ಒಪ್ಪಿಗೆ ಪಡೆಯಬೇಕಾಗುತ್ತದೆ. ರಾಜ್ಯದಲ್ಲಿನ ಪ್ರಕರಣಗಳನ್ನು ಪರಿಶೀಲನೆ ನಡೆಸಿ ಪ್ರಕರಣವಾರು ಆಧಾರದ ಮೇಲೆ ತನಿಖೆ ನಡೆಸಲು ಸಿಬಿಐ ತನಿಖಾ ಸಂಸ್ಥೆಗೆ ಅನುಮತಿ ನೀಡಲು ನಿರ್ಧರಿಸಿದೆ.










0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo