Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಉಡುಪಿ ಜಿಲ್ಲೆಯಲ್ಲಿ ಕಾಲರಾ ಭೀತಿ; ಸಾರ್ವಜನಿಕರು ಸ್ವಚ್ಚತೆಗೆ ಆದ್ಯತೆ ನೀಡಿ; ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಕರೆ

Udupinews





ಉಡುಪಿ :- ಜಿಲ್ಲೆಯ ಕೆಲವು ಭಾಗಗಳಲ್ಲಿ ಕಾಲರಾ ಪ್ರಕರಣಗಳು ಕಂಡುಬಂದಿದ್ದು, ಸಾರ್ವಜನಿಕರು ಈ ಬಗ್ಗೆ ಎಚ್ಚರ ದಿಂದ ಇದ್ದು ಸ್ವಚ್ಛತೆಗೆ ಆದ್ಯತೆ ನೀಡಿದಲ್ಲಿ ಮಾತ್ರ ಕಾಲರಾ ರೋಗದಿಂದ ದೂರವಿರಲು ಸಾಧ್ಯ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹೇಳಿದ್ದಾರೆ.

ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ಕಣ್ಗಾವಲು ಸಮಿತಿ ಸಭೆ ಹಾಗೂ ಡೆಂಗ್ಯೂ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಜಿಲ್ಲೆಯಲ್ಲಿ ಕಳೆದ ವಾರದಲ್ಲಿ 11 ಕಾಲರಾ ಪ್ರಕರಣಗಳು ವರದಿಯಾಗಿದ್ದು, ಮೊದಲ ಪ್ರಕರಣ ವರದಿಯಾದ ಕಾರ್ಕಳದ ಈದು ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ 5 ಪ್ರಕರಣಗಳು ಕಂಡುಬಂದಿವೆ. ಉಳಿದಂತೆ ಮಲ್ಪೆ, ಶಿರ್ವ, ಕಾಪು, ಕೆಮ್ಮಣ್ಣು ಪ್ರದೇಶಗಳಲ್ಲಿ ವಾಂತಿಬೇಧಿ ಕಂಡುಬಂದ್ದಿದ್ದು, ಅವುಗಳೂ ಸಹ ಕಾಲರಾ ರೋಗ ಎಂದು ವರದಿ ಬಂದಿವೆ. ಹೀಗಾಗಿ ಸಾರ್ವಜನಿಕರು ಕಾಲರಾ ರೋಗದ ಬಗ್ಗೆ ಹೆಚ್ಚು ಮುಂಜಾಗೃತೆ ವಹಿಸಬೇಕು ಎಂದವರು ಮನವಿ ಮಾಡಿದರು.

ಸಾರ್ವಜನಿಕರು ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು. ಎಲ್ಲಾ ಸಮುದ್ರ ಉತ್ಪನ್ನಗಳನ್ನು ಚೆನ್ನಾಗಿ ತೊಳೆದು ಉಪಯೋಗಿಸಬೇಕು. ಊಟ ತಯಾರಿ ಹಾಗೂ ಊಟ ಮಾಡುವ ಮುನ್ನ ಕೈಗಳನ್ನು ಸಾಬೂನಿನಿಂದ ಸ್ವಚ್ಛಗೊಳಿಸಬೇಕು. ಶೌಚಾಲಯಗಳನ್ನು ಬಳಸಿದ ನಂತರವು ಸಹ ಕೈಗಳನ್ನು ಸಾಬೂನಿನಿಂದ ತೊಳೆದು ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದರು.

ಮಳೆಗಾಲ ಮುಗಿಯುತ್ತಾ ಬಂದಿರುವ ಹಿನ್ನ್ನೆಲೆಯಲ್ಲಿ ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿರುವ ಬಾವಿ ಹಾಗೂ ಇತರ ಮೂಲದ ನೀರು ಪರೀಕ್ಷೆಯನ್ನು ಸ್ಥಳೀಯ ಸಂಸ್ಥೆಗಳು ಹಾಗೂ ಆರೋಗ್ಯ ಇಲಾಖೆಯ ವತಿಯಿಂದ ಕೈಗೊಂಡು ಅವುಗಳು ಬಳಕೆಗೆ ಯೋಗ್ಯವಾಗಿವೆ ಎಂಬ ಬಗ್ಗೆ ಖಚಿತ ಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.


ಸೆ. 14ರಿಂದ ಅಕ್ಟೋಬರ್ 2ರವರೆಗೆ ಸ್ವಚ್ಚತಾ ಹೀ ಸೇವಾ ಅಭಿಯಾನವನ್ನು ಅಂದೋಲನದ ರೀತಿಯಲ್ಲಿ ನಡೆಸಲಾಗುತ್ತಿದೆ. ಸಾರ್ವಜನಿಕರು ತಮ್ಮ ಮನೆಯ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು. ಸ್ಥಳೀಯ ಸಂಸ್ಥೆಗಳು ಸಾರ್ವಜನಿಕ ಸ್ಥಳಗಳು, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಸಾರ್ವಜನಿಕ ಶೌಚಾಲಯಗಳಲ್ಲಿ ನೈರ್ಮಲ್ಯವನ್ನು ಕಾಪಾಡಲು ಹೆಚ್ಚಿನ ಆದ್ಯತೆ ವಹಿಸಬೇಕು ಎಂದವರು ಸೂಚನೆ ನೀಡಿದರು.

ಮಣಿಪಾಲ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ವತಿಯಿಂದ ಗರ್ಭಿಣಿ ಮಹಿಳೆಯರ ಆರೋಗ್ಯ ಸುಧಾರಣೆ ಕುರಿತು ಮಾಹಿತಿ ಗಳನ್ನು ಕ್ರೋಢಿಕರಿಸುವ ಜನನಿ ಆಯಪ್‌ನ್ನು ಸೃಜನಿಸಿದ್ದು ಇದರ ಪ್ರಾತ್ಯಕ್ಷಿಕೆಯನ್ನು ಸಭೆಯಲ್ಲಿ ಪ್ರದರ್ಶಿಸಿ ಸಾಧಕ ಭಾದಕ ಗಳ ಕುರಿತು ಚರ್ಚಿಸಲಾಯಿತು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಎಂಐಟಿ ನಿರ್ದೇಶಕ ಡಾ.ಅನಿಲ್ ರಾಣಾ, ಎಂಐಟಿ ಉಪನಿರ್ದೇಶಕ ಡಾ.ಸೋಮಶೇಖರ ಭಟ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಐ.ಪಿ ಗಡಾದ್, ಜಿಲ್ಲಾ ಸರ್ವೇಕ್ಷಣಾ ಧಿಕಾರಿ ಡಾ.ನಾಗರತ್ನ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ. ಪ್ರಶಾಂತ್ ಭಟ್, ಪೌರಾಯುಕ್ತ ರಾಯಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ, ತಾಲೂಕು ಆರೋಗ್ಯಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.









0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo