Slider


ಉಡುಪಿ: ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ; ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾ ಕುಮಾರಿ

Udupinews

 





ಉಡುಪಿ: ಜಿಲ್ಲೆಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ತಡೆಗಟ್ಟುವುದರ ಮೂಲಕ ರೇಬಿಸ್ ರೋಗ ನಿಯಂತ್ರಣಕ್ಕೆ ಸ್ಥಳೀಯ ಸಂಸ್ಥೆಯವರು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು.

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರಾಣಿ ಸಂತಾನ ನಿಯಂತ್ರಣ, ಅನುಷ್ಠಾನ ಮೇಲ್ವಿಚಾರಣೆ ಸಮಿತಿ ರಚನೆ ಮತ್ತು ಸ್ಥಳೀಯ ಮಟ್ಟದ ಸಮಿತಿ ರಚನೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.  

ರಾಷ್ಟ್ರೀಯ ರೇಬಿಸ್ ನಿಯಂತ್ರಣ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು. ನಾಯಿ ಕಡಿತದ ಪ್ರಕರಣಗಳಿಗೆ ಜಿಲ್ಲೆಯ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ, ಸಮುದಾಯ ಆರೊಗ್ಯ ಕೇಂದ್ರಗಳಲ್ಲಿ, ತಾಲೂಕು ಆಸ್ಪತ್ರೆ ಮತ್ತು ಜಿಲ್ಲಾ ಆಸ್ಪತ್ರೆಯಲ್ಲಿ ಪೂರ್ಣ ಪ್ರಮಾಣದ ಲಸಿಕೆಗಳು ಲಭ್ಯವಿರುವಂತೆ ನೋಡಿಕೊಳ್ಳಬೇಕು ಎಂದರು. 

ಜಿಲ್ಲೆಯಲ್ಲಿ ಸಂತಾನ ಹರಣ ಶಸ್ತ್ರಚಿಕಿತ್ಸೆ ಅಡಿಯಲ್ಲಿ ಪುರಸಭೆ, ಪಟ್ಟಣ ಪಂಚಾಯತ್ ಹಾಗೂ ಗ್ರಾಮ ಪಂಚಾಯತ್‌ನಲ್ಲಿ 3007 ನಾಯಿಗಳಿಗೆ, ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ 447 ನಾಯಿಗಳು ಸೇರಿದಂತೆ ಒಟ್ಟಾರೆ 3454 ನಾಯಿಗಳಿಗೆ ಶಸ್ತçಚಿಕಿತ್ಸೆ ಮಾಡಲಾಗಿದೆ ಎಂದರು.

ಪ್ರಸ್ತುತ ಸಾಲಿನಲ್ಲಿ ಏಪ್ರಿಲ್ ನಿಂದ ಈವರೆಗೆ ಪಟ್ಟಣ ಪಂಚಾಯತ್, ಪುರಸಭೆ ಹಾಗೂ ಗ್ರಾಮ ಪಂಚಾಯತ್ ನಲ್ಲಿ 320, ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ 797 ಸೇರಿದಂತೆ ಒಟ್ಟು 1117 ನಾಯಿಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ ಎಂದರು.

 ತಾಲೂಕು ಮಟ್ಟದ ಹಾಗೂ ಸ್ಥಳೀಯ ಸಂಸ್ಥೆಯ ಮಟ್ಟದಲ್ಲಿ ಬೀದಿ ನಾಯಿ ಸಂತಾನ ನಿಯಂತ್ರಣ ಹಾಗೂ ಹುಚ್ಚು ನಾಯಿ ನಿಯಂತ್ರಣಕ್ಕಾಗಿ ಆಗಿಂದಾಗೆ ಸಭೆ ನಡೆಸಿ ಅವುಗಳ ನಿಯಂತ್ರಣಕ್ಕೆ ಮುಂದಾಗಬೇಕು ಎಂದು ಸೂಚನೆ ನೀಡಿದರು.

ರಾಷ್ಟ್ರೀಯ ರೇಬಿಸ್ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಜಿಲ್ಲೆಯಲ್ಲಿ ರಾಷ್ಟ್ರೀಯ ರೇಬಿಸ್ ನಿಯಂತ್ರಣ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಅನುಷ್ಟಾನಗೊಂಡಿದೆ. 2024 ನೇ ಸಾಲಿನಿಂದ ಈವರೆಗೆ ಒಟ್ಟು 9307 ನಾಯಿ ಕಡಿತದ ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ, ತಾಲೂಕು ಆಸ್ಪತ್ರೆಗಳಲ್ಲಿ ಮತ್ತು ಜಿಲ್ಲಾ ಆಸ್ಪತ್ರೆಯಲ್ಲಿ ಲಸಿಕೆಗಳು ಲಭ್ಯವಿದ್ದು, ಎಲ್ಲ ಪ್ರಕರಣಗಳಿಗೂ ಲಸಿಕೆಯನ್ನು ನೀಡಲಾಗಿದೆ ಎಂದರು. 

  ಸ್ಥಳೀಯ ಸಂಸ್ಥೆಗಳು ಪ್ರತಿ ವರ್ಷವೂ ತಮ್ಮ ವ್ಯಾಪ್ತಿಯ ಪ್ರದೇಶದ ಬೀದಿ ನಾಯಿ ಸಂತಾನ ನಿಯಂತ್ರಣಕ್ಕೆ ಅವಶ್ಯವಿರುವ ಅನುದಾನವನ್ನು ಆಯವ್ಯಯದಲ್ಲಿ ಮೀಸಲಿರಿಸಿ ಅವುಗಳ ನಿಯಂತ್ರಣಕ್ಕೆ ಮೂಲಭೂತ ಸೌಲಭ್ಯಗಳನ್ನು ಒದಗಿಸಿಕೊಡಬೇಕು ಎಂದರು.

  ಜಿಲ್ಲೆಯ ಎ.ಬಿ.ಸಿ ಕೇಂದ್ರದಲ್ಲಿ ಪ್ರತಿಯೊಬ್ಬರು ತಿಂಗಳು 600 ಬೀದಿ ನಾಯಿಗಳ ಶಸ್ತçಚಿಕಿತ್ಸೆ ನಿರಂತರವಾಗಿ ನಡೆಯುವಂತೆ ಕಾರ್ಯಕ್ರಮ ರೂಪಿಸಿ ಅನುಷ್ಠಾನಗೊಳಿಸಬೇಕು ಎಂದು ಸೂಚನೆ ನೀಡಿದ ಅವರು, ಪ್ರಥಮ ಹಂತದಲ್ಲಿ ಎಲ್ಲಾ ಮೂಲಭೂತ ಸೌಕರ್ಯಗಳೊಂದಿಗೆ ಜಿಲ್ಲಾ ಕೇಂದ್ರದಲ್ಲಿ ಎ.ಬಿ.ಸಿ ಕೇಂದ್ರಗಳನ್ನು ಸ್ಥಾಪಿಸಬೇಕು ಅಲ್ಲಿ ಅವಶ್ಯ ಸೌಲಭ್ಯಗಳು ಇರುವಂತೆ ಕ್ರಮ ವಹಿಸಬೇಕು ಎಂದರು.

ಸಭೆಯಲ್ಲಿ ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ. ಎಂ.ಸಿ ರೆಡ್ಡಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಐ.ಪಿ ಗಡಾದ್, ನಗರಸಭೆ ಪರಿಸರ ಅಭಿಯಂತರರಾದ ಸ್ನೇಹ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.









0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo