ಬೆಂಗಳೂರು: ಕಂಬಳಕ್ಕೆ ತಡೆ ಕೋರಿ ಹೈಕೋರ್ಟ್‌ಗೆ ಅರ್ಜಿ: ಇಂದು ವಿಚಾರಣೆ
ಬೆಂಗಳೂರು: ಅಕ್ಟೋಬರ್ 26ರಂದು ಬೆಂಗಳೂರಿನಲ್ಲಿ ಆಯೋಜಿಸಿರುವ ಕಂಬಳ ಸ್ಪರ್ಧೆಯನ್ನು ನಿಲ್ಲಿಸುವಂತೆ ಪ್ರಾಣಿ ದಯಾ ಸಂಘ 'ಪೆಟಾ' ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದೆ. ಅರ್ಜಿಯನ್ನು ತುರ್ತು ವಿಚಾರಣೆಗೆ ಪರಿಗಣಿಸುವಂತೆ ಹಿರಿಯ ವಕೀಲ ಧ್ಯಾನ್ ಚಿನ್ನಪ್ಪ ಅವರು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ಪೀಠಕ್ಕೆ ಮನವಿ ಮಾಡಿದ್ದಾರೆ. ಪೆಟಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ನಡೆಸಲಿದೆ.
'ಕಂಬಳ ಸ್ಪರ್ಧೆಯನ್ನು ದಕ್ಷಿಣ ಕನ್ನಡ ಮತ್ತು ಉಡುಪಿಯ ಗ್ರಾಮೀಣ ಭಾಗ ಹೊರತುಪಡಿಸಿ ಬೇರೆಲ್ಲೂ ನಡೆಸಲು ಅನುಮತಿ ನೀಡಬಾರದು. ಪ್ರಾಣಿಗಳ ಮೇಲಿನ ಕ್ರೌರ್ಯ ನಿಷೇಧ ಕಾಯ್ದೆ-2017ರ ನಿಬಂಧನೆಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಗೆ ನಿರ್ದೇಶಿಸಬೇಕು' ಎಂದು ಅರ್ಜಿಯಲ್ಲಿ ಕೋರಲಾಗಿದೆ.
ಅರ್ಜಿಯಲ್ಲಿ ಪಶು ಸಂಗೋಪನಾ ಇಲಾಖೆ ಪ್ರಧಾನ ಕಾರ್ಯದರ್ಶಿ, ಬೆಂಗಳೂರು ನಗರ ಜಿಲ್ಲೆ ಜಿಲ್ಲಾಧಿಕಾರಿ ಮತ್ತು ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ರೈ ಅವರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ