ಉಡುಪಿ: : ರಾಷ್ಟೀಯ ಹೆದ್ದಾರಿಯ ಇಂದ್ರಾಳಿ ಬಳಿಯ ರೈಲ್ವೇ ಮೇಲ್ಸೇತುವೆ ಕಾಮಗಾರಿಯನ್ನು ಪೂರ್ಣಗೊಳಿಸಿ, ಜನವರಿ 10 ರಿಂದ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಅಭಿಯಂತರರಿಗೆ ಹಾಗೂ ಗುತ್ತಿಗೆದಾರರಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು.
ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಾಂಗಣದಲ್ಲಿ ರಾಷ್ಟ್ರೀಯ ಹೆದ್ದಾರಿ 169 ಎ ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿ ಪ್ರಗತಿ ಪರಿಶೀಲನೆ ಕುರಿತು ಚರ್ಚಿಸುವ ಸಲುವಾಗಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಕಾಮಗಾರಿಯನ್ನು ಕೈಗೊಳ್ಳಲು 2018 ರಿಂದಲೇ ಕಾಮಗಾರಿಗಳನ್ನು ಕೈಗೊಳ್ಳಲು ಪತ್ರ ವ್ಯವಹಾರಗಳು ನಡೆದಿದ್ದವು, ಕಳೆದ ಮೂರು ವರ್ಷದಿಂದ ಟೆಂಡರ್ ಪ್ರಕ್ರಿಯೆಯನ್ನು ಕೈಗೊಂಡಿದ್ದರೂ ಸಹ ನಿಗಧಿತ ಕಾಲಾವಧಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸದೇ ಇರುವುದರಿಂದ ಸಾರ್ವಜನಿಕ ಸಂಚಾರಕ್ಕೆ ಹೆಚ್ಚಿನ ವ್ಯತ್ಯಯ ಉಂಟಾಗಿ ಪ್ರತೀ ದಿನವೂ ಜಿಲ್ಲಾಡಳಿತಕ್ಕೆ ದೂರುಗಳು ಕೇಳಿ ಬರುತ್ತಿವೆ. ಹಾಗೂ ಅಪಘಾತಗಳು ಸಹ ಕಾಮಗಾರಿಯ ವಿಳಂಬದಿಂದಾಗಿ ಉಂಟಾಗಿವೆ. ಇವಕ್ಕೆಲ್ಲಾ ಅಭಿಯಂತರರುಗಳು, ಗುತ್ತಿಗೆದಾರರೇ ಕಾರಣ ಎಂದು ಅಸಮಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿಗಳು, ಕಾಮಗಾರಿಯನ್ನು ಆದ್ಯತೆಯ ಮೇಲೆ ಕೈಗೊಳ್ಳಬೇಕು. ಪ್ರತೀ ವಾರಕ್ಕೊಮ್ಮೆ ಕಾಮಗಾರಿ ಪ್ರಕ್ರಿಯೆಯ ಮಾಹಿತಿಯನ್ನು ನೀಡುವಂತೆ ಸೂಚನೆ ನೀಡಿದರು.
ಮೇಲ್ಸೇತುವೆ ಕಾಮಗಾರಿಯನ್ನು ಕೈಗೊಳ್ಳಲು ಈಗಾಗಲೇ ರೈಲ್ವೆ ಇಲಾಖೆಯ ವತಿಯಿಂದ ಅನುಮತಿಯನ್ನು ನೀಡಲಾಗಿದ್ದು, ಸಿವಿಲ್ ಕಾಮಗಾರಿ ಹಾಗೂ ಕಬ್ಬಿಣದ ಬ್ರಿಡ್ಜ್ನ ಜೋಡಣೆ ಕಾಮಗಾರಿಗಳನ್ನು ಹಗಲು ಹಾಗೂ ರಾತ್ರಿ ಎರಡು ಪಾಳಯದಲ್ಲಿ ಕಾರ್ಮಿಕರನ್ನು ನಿಯೋಜಿಸಿ, ಗುಣಮಟ್ಟದೊಂದಿಗೆ ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿದರು.
ಕಾಮಗಾರಿಯನ್ನು ಕೈಗೊಳ್ಳುವಾಗ ಸುರಕ್ಷತೆಗೆ ಆದ್ಯತೆಯನ್ನು ನೀಡಬೇಕು. ರೈಲು ಸಾಗಾಣಿಕೆಗೆ ಯಾವುದೇ ತೊಂದರೆ ಆಗದಂತೆ ನಿಗಾ ವಹಿಸಬೇಕು ಎಂದ ಅವರು ಜನವರಿ 7 ರ ಒಳಗಾಗಿ ಪೂರ್ಣ ಪ್ರಮಾಣದಲ್ಲಿ ಕಾಮಗಾರಿಗಳನ್ನು ಸಂಪೂರ್ಣವಾಗಿ ಮುಗಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ, ಕೊಂಕಣ ರೈಲ್ವೆಯ ಸೀನೀಂುರ್ ಇಂಜಿನಿಯರ್ ಗೋಪಾಲ ಕೃಷ್ಣ, ಶೃಂಗೇರಿ-ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಮಂಜುನಾಥ್, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ