Slider


ಜಮ್ಮುವಿನಲ್ಲಿ ಸೇನಾ ವಾಹನ ಅಪಘಾತ: ಕುಂದಾಪುರ ಬೀಡಾಡಿ ಮೂಲದ ಯೋಧ ಅನೂಪ್ ಹುತಾತ್ಮ

Udupi


ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಮಂಗಳವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕರ್ನಾಟಕದ ಮೂವರ ಸಹಿತ ಐವರು ಯೋಧರು ಹುತಾತ್ಮರಾಗಿದ್ದಾರೆ.

ಘಟನೆಯಲ್ಲಿ ಐವರು ಯೋಧರು ಗಾಯಗೊಂಡಿದ್ದು ಅವರನ್ನು ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಳಗಾವಿಯ ದಯಾನಂದ ತಿರಕಣ್ಣವರ (45), ಕುಂದಾಪುರ ಬಳಿಯ ಕೋಟೇಶ್ವರ ಬೀಜಾಡಿಯ ಅನೂಪ್ (31) ಬಾಗಲಕೋಟೆಯ ಮಹೇಶ್ ಮಾರಿಗೊಂಡ (25 ) ಮೃತ ಯೋಧರು. ಇನ್ನಿಬ್ಬರು ಮಹಾರಾಷ್ಟ್ರದವರು.

ಯೋಧರು ಸೇನಾ ವಾಹನದಲ್ಲಿ ಮೆಂಡರ್ ಎಂಬ ಪ್ರದೇಶಕ್ಕೆ ಕರ್ತವ್ಯಕ್ಕೆ ತೆರಳುತ್ತಿದ್ದ ವೇಳೆ ಕಿರಿದಾದ ರಸ್ತೆಯಲ್ಲಿ 150 ಅಡಿ ಆಳದ ಪ್ರಪಾತಕ್ಕೆ ವಾಹನ ಉರುಳಿ ಬಿದ್ದು ಅಪಘಾತ ಸಂಭವಿಸಿದೆ ಎಂದು ಮೂಲಗಳು ಸ್ಪಷ್ಟಪಡಿಸಿವೆ.

ಬಾಗಲಕೋಟೆ ಜಿಲ್ಲೆ ರಬಕವಿಬನಹಟ್ಟಿ ತಾಲ್ಲೂಕಿನ ಮಹಾಲಿಂಗಪುರ ನಿವಾಸಿ ಮಹೇಶ್ ನಾಗಪ್ಪ ಮಾರಿಗೊಂಡ ಅವರು 11 ನೆ ಮರಾಠ ರೆಜಿಮೆಂಟ್ ನಲ್ಲಿ ಸೇವೆ ಸಲ್ಲಿಸುತ್ತಿದ್ದರು.

ಬೆಳಗಾವಿಯ ಸಾಂಬ್ರಾ ಗ್ರಾಮದ ಯೋಧ ಸುಬೇದಾರ್ ದಯಾನಂದ ಅವರು, ಕೆಲವು ವರ್ಷಗಳಿಂದ ಸೇನೆಯಲ್ಲಿ ದೇಶದ ವಿವಿಧ ಭಾಗಗಳಲ್ಲಿ ಸೇವೆ ಸಲ್ಲಿಸಿದ್ದರು.

ಬೀಜಾಡಿ ನಿವಾಸಿ ಚಂದು ಪೂಜಾರಿ ಮತ್ತು ನಾರಾಯಣ ಪೂಜಾರಿ ದಂಪತಿಗಳ ಪುತ್ರ ಅನೂಪ್ ಪೂಜಾರಿ ಸೇನೆಗೆ ಸೇರಿ 13 ವರ್ಷವಾಗಿತ್ತು. ಅವರಿಗೆ ವಿವಾಹವಾಗಿದ್ದು 2 ವರ್ಷದ ಹೆಣ್ಣು ಮಗುವಿದೆ. ಹುತಾತ್ಮ ಯೋಧ ತಾಯಿ, ಇಬ್ಬರು ಸಹೋದರಿಯರು, ಪತ್ನಿ, ಪುತ್ರಿ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

ಡಿ.26ರ ಗುರುವಾರ ತೆಕ್ಕಟ್ಟೆಯಿಂದ ಪಾರ್ಥೀವ ಶರೀರವನ್ನು ತೆರೆದ ವಾಹನದಲ್ಲಿ ಕೋಟೇಶ್ವರ ಮೂಲಕವಾಗಿ ಮೆರವಣಿಗೆ ನಡೆಸಿ ಹುಟ್ಟೂರಾದ ಬೀಜಾಡಿಗೆ ಕರೆತಂದು ಸಕಲ ವಿಧಿಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲಾಗುತ್ತದೆ. ಬೀಜಾಡಿ ಪಡುಶಾಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದು ತಿಳಿದುಬಂದಿದೆ.





0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo