ಉಡುಪಿ : ಮ್ಯಾನ್ ಹೋಲ್ ಗಳಿಗೆ ಇಳಿದು ಮಾನವ ತ್ಯಾಜ್ಯವನ್ನು ಸ್ವಚ್ಛಗೊಳಿಸುವ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ಪದ್ಧತಿಗೆ ದೇಶದಾದ್ಯಂತ ನಿರ್ಬಂದ ಹೇರಲಾಗಿದ್ದು, ಇದನ್ನು ಉಲ್ಲಂಘಿಸಿ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ಗಳನ್ನು ನೇಮಿಸಿಕೊಂಡಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ನೇರ ಹೊಣೆಗಾರ ರನ್ನಾಗಿ ಮಾಡಿ ಅವರುಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಹೇಳಿದರು.
ಅವರು ಶನಿವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ನಗರ ಹಾಗೂ ಗ್ರಾಮೀಣ ಪ್ರದೇಶದ ವ್ಯಾಪ್ತಿಯಲ್ಲಿ ಮ್ಯಾನುಯಲ್ ಸ್ಕಾವೆಂಜರ್ಸ್ ಹಾಗೂ ಅನೈರ್ಮಲ್ಯ ಶೌಚಾಲಯಗಳ ಕುರಿತು ಸಮೀಕ್ಷೆ ನಡೆಸಲಾಗಿದ್ದು, ಪ್ರಸ್ತುತ ಜಿಲ್ಲೆಯಲ್ಲಿ ಯಾವುದೇ ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ಪ್ರಕರಣಗಳು ಕಂಡುಬಂದಿರುವುದಿಲ್ಲ ಎಂದರು.
ಸಫಾಯಿ ಕರ್ಮಚಾರಿಗಳ ಶ್ರೇಯೋಭಿವೃದ್ಧಿಗೆ ಸರಕಾರ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಈ ಬಗ್ಗೆ ಅವರುಗಳಿಗೆ ಮಾಹಿತಿ ತಲುಪಿಸುವುದರೊಂದಿಗೆ ಯೋಜನೆಯ ಫಲನುಭವಿಗಳನ್ನಾಗಿ ಮಾಡಿ ಅವರುಗಳನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡಬೇಕು ಎಂದರು.
ಜಿಲ್ಲೆಯ ನಗರ ಅಥವಾ ಗ್ರಾಮೀಣ ಭಾಗದ ಯಾವುದೇ ಮನೆ, ಕಂಪೆನಿ, ಆಸ್ಪತ್ರೆ, ಅಪಾರ್ಟ್ಮೆಂಟ್, ಸೇರಿದಂತೆ ಯಾವುದೇ ಕಡೆಯಲ್ಲಿ ಮ್ಯಾನ್ ಹೋಲ್, ಸೆಪ್ಟಿಕ್ ಟ್ಯಾಂಕ್, ತೆರೆದ ಚರಂಡಿ, ಪಿಟ್ ಗುಂಡಿ ಕಟ್ಟಿಕೊಂಡಲ್ಲಿ ಅದನ್ನು ಸ್ವಚ್ಛಗೊಳಿಸಲು ಸಕ್ಕಿಂಗ್ ಯಂತ್ರಗಳನ್ನೇ ಬಳಸಬೇಕು. ಈ ಬಗ್ಗೆ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ತೆರೆಯಲಾದ ಸಹಾಯವಾಣಿಗಳನ್ನು ಸಂಪರ್ಕಿಸುವಂತೆ ಘನ ತ್ಯಾಜ್ಯ ವಿಲೇವಾರಿ ವಾಹನ ಹಾಗೂ ಧ್ವನಿ ವರ್ಧಕಗಳ ಮೂಲಕ ವ್ಯಾಪಕ ಪ್ರಚಾರ ಕೈಗೊಂಡು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದರು.
ಪೌರ ಕಾರ್ಮಿಕರುಗಳು ದೈನಂದಿನ ಸ್ವಚ್ಛತಾ ಕೆಲಸಗಳನ್ನು ನಿರ್ವಹಿಸುವಾಗ ತಪ್ಪದೆ ಕಡ್ಡಾಯವಾಗಿ ಸುರಕ್ಷತಾ ಪರಿಕರಗಳನ್ನು ಧರಿಸಿಕೊಂಡು ಕರ್ತವ್ಯ ನಿರ್ವಹಿಸಬೇಕು ಎಂದ ಅವರು, ಇದರ ಬಳಕೆಯ ಬಗ್ಗೆ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರುಗಳು ಹಾಗ ಅರೋಗ್ಯ ನಿರೀಕ್ಷಕರುಗಳು ಸ್ಥಳ ಪರಿಶೀಲನೆ ಮಾಡಿ ಖಾತ್ರಿ ಪಡಿಸಿಕೊಳ್ಳಬೇಕು ಎಂದರು.
ನಗರ ಸ್ಥಳೀಯ ಸಂಸ್ಥೆ ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರು, ಲೋಡರ್ಸ್, ಕ್ಲಿನರ್ಸ್ ಹಾಗೂ ಡ್ರೈವರ್ಸ್ ಗಳಿಗೆ ಪ್ರತಿ ಮಾಹೇ ವೇತನವನ್ನು ಸರಿಯಾದ ಸಮಯಕ್ಕೆ ಪಾವತಿ ಆಗುತ್ತಿರುವ ಬಗ್ಗೆ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಖಾತ್ರಿ ಪಡಿಸಿಕೊಳ್ಳಬೇಕು ಎಂದರು.
ಪೌರ ಕಾರ್ಮಿಕರಗಳ ಆರೋಗ್ಯದ ಹಿತದೃಷ್ಟಿಯಿಂದ ಪೌರಾಡಳಿತ ನಿರ್ದೇಶನದಂತೆ ಪ್ರತಿ ಮೂರು ತಿಂಗಳಿಗೊಮ್ಮೆ ಅರೋಗ್ಯ ತಪಾಸಣೆ ಮತ್ತು ಮಾಸ್ಟರ್ ಹೆಲ್ತ್ ಚೆಕ್ ಅಪ್ ಮಾಡಿಸಬೇಕು. ಈ ಬಗ್ಗೆ ಪ್ರತಿ ತ್ರೈಮಾಸಿಕ ಸಭೆಗೆ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಮಾಹಿತಿ ನೀಡಬೇಕು ಎಂದ ಅವರು, ಪೌರಕಾರ್ಮಿಕರುಗಳಿಗೆ ಗುಣಮಟ್ಟದ ಪೌಷ್ಟಿಕ ಉಪಹಾರವನ್ನು ಸಹ ನೀಡಬೇಕು ಎಂದರು.
ಜಿಲ್ಲೆಯಲ್ಲಿ ಗುರುತಿಸಲಾದ ಹಾಗೂ ಮೃತಪಟ್ಟ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ಗಳ ಕುಟುಂಬದ ಅವಲಂಬಿತರಿಗೆ ಗುರುತಿನ ಚೀಟಿ, ಒಂದು ಬಾರಿ ನಗದು ಸಹಾಯ, ಮನೆ, ನಿವೇಶನ, ಶಿಕ್ಷಣ, ವಿದ್ಯಾರ್ಥಿ ವೇತನ, ಉದ್ಯೋಗ ನೀಡುವುದರೊಂದಿಗೆ ಅವರುಗಳಿಗೆ ಪುನರ್ವಸತಿ ಕಲ್ಪಿಸಲಾಗುವುದು ಎಂದರು.
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘಗಳ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ಮಾನ್ಯುಯಲ್ ಸ್ಕ್ಯಾವೆಂಜರ್ಸ್ ಮತ್ತು ಪೌರ ಕಾರ್ಮಿಕರ ಮಕ್ಕಳಿಗೆ ಶೇ. 5 ರಷ್ಟು ಪ್ರವೇಶ ನೀಡಲಾಗುವುದು, 6 ರಿಂದ 10 ನೇ ತರಗತಿ ವರೆಗೆ ಉಚಿತ ಆಂಗ್ಲ ಮಾಧ್ಯಮ ಶಿಕ್ಷಣ, ಊಟ, ವಸತಿ ಸೇರಿದಂತೆ ಇತರೆ ಸೌಲಭ್ಯಗಳೊಂದಿಗೆ ಪ್ರವೇಶ ಪರೀಕ್ಷೆಯನ್ನು ಬರೆಯದೆ ನೇರವಾಗಿ ವಸತಿ ಶಾಲೆಗಳಲ್ಲಿ ದಾಖಲಾತಿ ಮಾಡಿಕೊಳ್ಳಲು ಅವಕಾಶವಿದ್ದು, ಈ ಕುರಿತು ಪೌರ ಕಾರ್ಮಿಕರು ಹಾಗೂ ಸ್ವಚ್ಛತಾ ಕಾರ್ಮಿಕರುಗಳಿಗೆ ಮಾಹಿತಿ ನೀಡಬೇಕು ಎಂದರು.
ಪ್ರಧಾನ ಮಂತ್ರಿ ಜ್ಯೋತಿ ಬಿಮಾ ಯೋಜನೆಯಡಿ ವಾರ್ಷಿಕ 450 ರೂ. ಹಾಗೂ ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆಯಡಿ ವರ್ಷಕ್ಕೆ 20 ರೂ ಗಳನ್ನು ಪಾವತಿಸಿದ್ದಲ್ಲಿ, ಅಪಘಾತ ಅಥವಾ ಮರಣ ಹೊಂದಿದ ಪಕ್ಷದಲ್ಲಿ ಕುಟುಂಬದವರಿಗೆ 2 ಲಕ್ಷ ರೂ. ಪರಿಹಾರ ಮೊತ್ತ ದೊರಕಲಿದ್ದು, ಎಲ್ಲಾ ಅಧಿಕಾರಿಗಳು ತಮ್ಮ ಪೌರ ಕಾರ್ಮಿಕರು ಹಾಗೂ ಸಿಬ್ಬಂದಿಗಳಿಗೆ ಕಡ್ಡಾಯವಾಗಿ ಈ ಯೋಜನೆ ಯನ್ನು ಮಾಡಿಸುವಂತೆ ತಿಳಿಸಿದರು.
ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಪ್ರಭಾರ ಉಪ ನಿರ್ದೇಶಕ ನಾರಾಯಣ ಸ್ವಾಮಿ, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಐ. ಪಿ. ಗಡಾದ್, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ಚಿದಾನಂದ ಸಂಜು, ಜಿಲ್ಲಾ ಮಟ್ಟದ ಅನುಷ್ಠಾನ ಅಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಮತ್ತಿತರರು ಉಪಸ್ಥಿತರಿದ್ದರು
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ