ಉಡುಪಿ, ಏ. 9: ರಾಜ್ಯ ಸರ್ಕಾರದ ಜನವಿರೋಧಿ ಧೋರಣೆ, ಬೆಲೆ ಏರಿಕೆ ನೀತಿ ಹಾಗೂ ಭ್ರಷ್ಟಾಚಾರವನ್ನು ಖಂಡಿಸಿ ಜಿಲ್ಲಾ ಬಿಜೆಪಿ ನಾಳೆ (ಏ. 10) ನಗರದಲ್ಲಿ ಬೃಹತ್ ಜನಾಕ್ರೋಶ ಯಾತ್ರೆಯನ್ನು ಹಮ್ಮಿಕೊಂಡಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರವು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಹೆಸರಿನಲ್ಲಿ ನಿರಂತರವಾಗಿ ಜನಸಾಮಾನ್ಯರಿಗೆ ಬೆಲೆ ಏರಿಕೆಯ ಬರೆ ಎಳೆಯುತ್ತಿದೆ. ಹಾಲು, ಮೊಸರು, ನೀರು, ಡೀಸೆಲ್ ದರ ಏರಿಕೆ ಮಾಡುವುದರ ಜೊತೆಗೆ ವಿದ್ಯುತ್ ಮತ್ತು ಮುದ್ರಾಂಕ ಶುಲ್ಕವನ್ನು ಸಹ ಹೆಚ್ಚಿಸಿದೆ. ಇದರ ಜೊತೆಗೆ ಮುಡಾ ಹಗರಣ, ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ಅನುದಾನದ ದುರ್ಬಳಕೆ ಹಾಗೂ ಸ್ಮಾರ್ಟ್ ಮೀಟರ್ ಹಗರಣಗಳು ಸರ್ಕಾರದ ಭ್ರಷ್ಟಾಚಾರಕ್ಕೆ ಸಾಕ್ಷಿಯಾಗಿವೆ. ಈ ಎಲ್ಲಾ ಜನವಿರೋಧಿ ನೀತಿಗಳ ವಿರುದ್ಧ ಈ ಜನಾಕ್ರೋಶ ಯಾತ್ರೆ ನಡೆಯಲಿದೆ ಎಂದು ಅವರು ಹೇಳಿದರು.
ನಗರದ ಕಡಿಯಾಳಿ ಬಿಜೆಪಿ ಕಚೇರಿ ಬಳಿಯ ಮೈದಾನದಲ್ಲಿ ನಡೆಯಲಿರುವ ಸಾರ್ವಜನಿಕ ಸಭೆಯಲ್ಲಿ ಅಂದಾಜು 5 ಸಾವಿರಕ್ಕೂ ಅಧಿಕ ಜನರು ಸೇರುವ ನಿರೀಕ್ಷೆಯಿದೆ. ಈ ಬೃಹತ್ ಪ್ರತಿಭಟನಾ ಸಭೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ರಾಜ್ಯದ ಹಲವು ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ. ಅಲ್ಲದೆ, ಜಿಲ್ಲೆಯ ಸಂಸದರು, ಶಾಸಕರು ಹಾಗೂ ಇತರ ಪ್ರಮುಖ ಮುಖಂಡರು ಸಹ ಈ ಸಂದರ್ಭದಲ್ಲಿ ಉಪಸ್ಥಿತರಿರಲಿದ್ದಾರೆ ಎಂದು ಕಿಶೋರ್ ಕುಮಾರ್ ಕುಂದಾಪುರ ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಶಾಸಕರಾದ ಯಶ್‌ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಕಿರಣ್ ಕೊಡ್ಗಿ, ಗುರುರಾಜ್ ಗಂಟಿಹೊಳೆ, ಮಂಗಳೂರು ವಿಭಾಗದ ಪ್ರಭಾರಿ ಕೆ. ಉದಯಕುಮಾರ್ ಶೆಟ್ಟಿ, ಮಾಜಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.
ಈ ಜನಾಕ್ರೋಶ ಯಾತ್ರೆಯು ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಜನರ ಆಕ್ರೋಶವನ್ನು ವ್ಯಕ್ತಪಡಿಸುವ ಪ್ರಮುಖ ವೇದಿಕೆಯಾಗಲಿದೆ ಎಂದು ಬಿಜೆಪಿ ಮುಖಂಡರು ತಿಳಿಸಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ