ಕಾರ್ಕಳ: ಪರಶುರಾಮನ ನಕಲಿ ಮೂರ್ತಿ ಪ್ರಕರಣ: ಎಫ್.ಐ.ಆರ್ ರದ್ದುಕೋರಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಕಾರ್ಕಳ: ಪರಶುರಾಮ ಥೀಮ್ ಪಾರ್ಕ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ ಐ ಆರ್ ರದ್ದು ಕೋರಿ ಶಿಲ್ಪಿ ಕೃಷ್ಣ ನಾಯಕ್ ಸಲ್ಲಿಸಿದ್ದ ಅರ್ಜಿಯನ್ನು ಇದಿಗ ಹೈಕೋರ್ಟ್ ವಜಾಗೊಳಿಸಿ ಆದೇಶ ಹೊರಡಿಸಿದೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರತಿಮೆ ನಿರ್ಮಾಣದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಎಫ್‌ಐಆರ್ ದಾಖಲಿಸಲಾಗಿತ್ತು. ಕೃಷ್ಣಶೆಟ್ಟಿ ಎಂಬುವವರು ಕಾರ್ಕಳ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾ.ಎಂ.ನಾಗಪ್ರಸನ್ನರಿದ್ದ ಹೈಕೋರ್ಟ್ ಪೀಠವು ಎಫ್‌ಐರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ.
ಕಳೆದ ಬಿಜೆಪಿ ಸರಕಾರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವರಾಗಿದ್ದ ಕಾರ್ಕಳ ಶಾಸಕ ಸುನೀಲ್ ಕುಮಾರ್ ನೇತೃತ್ವದಲ್ಲಿ ಉಮ್ಮಿಕಲ್ ಬೆಟ್ಟದ ಮೇಲೆ ಪರಶುರಾಮನ ಥೀಂ ಪಾರ್ಕ್ ನಿರ್ಮಾಣವಾಗಿತ್ತು. ಚುನಾವಣಾ ಪೂರ್ವದಲ್ಲಿ ಅಂದಿನ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ನೂತನ ಥೀಂ ಪಾರ್ಕ್ ಮತ್ತು ಪರಶುರಾಮನ ಭವ್ಯ ಮೂರ್ತಿ ಲೋಕಾರ್ಪಣೆ ಮಾಡಿದ್ದರು. ನಂತರ ದಿನಗಳಲ್ಲಿ ಕಾಮಗಾರಿ ಬಾಕಿ ಇದೆ ಎನ್ನುವ ಕಾರಣಕ್ಕೆ ಥೀಂ ಪಾರ್ಕ್‌ಗೆ ಪ್ರವಾಸಿಗರ ನಿಷೇಧ ಹೇರಲಾಗಿತ್ತು.